ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಪೂರ್ಣ ಸುರಕ್ಷತೆ-ಆತಂಕಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ

ಪಡುಬಿದ್ರಿ: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಈಗ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸಂಪೂರ್ಣ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭರವಸೆ ನೀಡಿದ್ದಾರೆ.

ಹೆಜಮಾಡಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಹೆಜಮಾಡಿಯ ವಿದ್ಯಾರ್ಥಿನಿಯೊಬ್ಬಳು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಪರೀಕ್ಷಾ ಕೇಂದ್ರದ ಉಳಿದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಉದ್ದೇಶದಿಂದ ಸೋಮವಾರ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು.
ಹೆಜಮಾಡಿ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗಿದೆ. ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆದ ಕೋಣೆಯನ್ನು ಮುಚ್ಚಲಾಗಿದೆ. ಅಲ್ಲಿದ್ದ ವಿದ್ಯಾರ್ಥಿಗಳಿಗೆ ಬೇರೆ ಕೋಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕಿತ ವಿದ್ಯಾರ್ಥಿಯೊಂದಿಗೆ ಸತತ 6ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಉಳಿದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆದ ಕಾರಣ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದು. ಇಂದು ಪರೀಕ್ಷೆಗೆ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಹಾಜರಾಗಿದ್ದು ಅವರ ಧೈರ್ಯವನ್ನು ಮೆಚ್ಚಲೇಬೇಕು. ಅದಕ್ಕೆ ಪೋಷಕರ ಮತ್ತು ಶಿಕ್ಷಕರ ಸಹಕಾರ ಸಾಕಷ್ಟಿತ್ತು. ಯಾವುದೇ ವಿದ್ಯಾರ್ಥಿ ಆತಂಕದಿಂದ ಪರೀಕ್ಷೆಗೆ ಬಾರದಿದ್ದಲ್ಲಿ ಅವರಿಗೆ ಇನ್ನೊಂದು ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. ಅಲ್ಲದೆ ಸೋಂಕಿತ ವಿದ್ಯಾರ್ಥಿಯೊಬ್ಬಳಲ್ಲದೆ ಇತರ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ತಗುಲಿಲ್ಲ ಎಂದರು.

ಕಾರ್ಕಳ ಕೋವಿಡ್ ಆಸ್ಪತ್ರೆಯಲ್ಲಿ ಆರೋಗ್ಯದಿಂದಿರುವ ಸೋಂಕಿತ ವಿದ್ಯಾರ್ಥಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು ಅವಳಿಗೆ ಧೈರ್ಯ ತುಂಬಿ ಆಸ್ಪತ್ರೆಯಲ್ಲಿ ಚೆನ್ನಾಗಿ ಓದು ಮುಂದುವರಿಸು. ನಿನಗೆ ತೊಂದರೆಯಾಗದಂತೆ ಮಗದೊಮ್ಮೆ ಪರೀಕ್ಷೆಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದರು.

ಜಿಲ್ಲೆಯಾದ್ಯಂತ ಎಲ್ಲೆಡೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದವರು ಹೇಳಿದರು.

ಈ ಸಂದರ್ಭ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೇಶಕ ಶೇಷಶಯನ ಕಾರಿಂಜೆ, ಸಬ್‍ಜೆಕ್ಟ್ ಇನ್ಸ್‍ಪೆಕ್ಟರ್ ಎಮ್.ನಾಗರಾಜ್, ಹೆಜಮಾಡಿ ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ, ಪಿಡಿಒ ಮಮತಾ ವೈ.ಶೆಟ್ಟಿ, ಗ್ರಾಮ ಕರಣಿಕ ಅರುಣ್ ಕುಮಾರ್, ಪಡುಬಿದ್ರಿ ಎಎಸ್‍ಐಗಳಾದ ದಿವಾಕರ್ ಮತ್ತು ಸುರೇಶ್ ಭಟ್ ಉಪಸ್ಥಿತರಿದ್ದರು.